Electric Vehicle ಮಾಲಕರಿಗೆ, ಖರೀದಿಗೆ ಬಯಸುವವರಿಗೆ ಸಿಹಿ ಸುದ್ದಿ| ಮೆಸ್ಕಾಂ ವ್ಯಾಪ್ತಿಯಲ್ಲಿ ತಲೆಯೆತ್ತಲಿವೆ 171 ಚಾರ್ಜಿಂಗ್ ಸ್ಟೇಷನ್

ಮಂಗಳೂರು: ಪರಿಸರ ಸ್ನೇಹಿ ವಿದ್ಯುತ್ ಚಾಲಿತ ವಾಹನಗಳ ಬಳಕೆಗೆ ಉತ್ತೇಜನ ಹೆಚ್ಚುತ್ತಿದೆ. ಜೇಬಿಗೆ ಹಿತಕರವಾದ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಜನರು ಮನಸ್ಸು ಮಾಡುತ್ತಿದ್ದರೂ ಚಾರ್ಜಿಂಗ್ ಸ್ಟೇಷನ್‌ ಸಹಿತ ಹಲವು ಮೂಲಸೌಕರ್ಯಗಳ ಕೊರತೆಯಿಂದ ಹಿಂದೇಟು ಹಾಕುತ್ತಿದ್ದಾರೆ. ಆದರೆ ಇದೀಗ ರಾಜ್ಯದಲ್ಲಿ ఇవి ಚಾರ್ಜಿಂಗ್ ಕೇಂದ್ರಗಳ ಸಂಖ್ಯೆಯನ್ನು ದುಪ್ಪಟ್ಟುಗೊಳಿಸಲು ಇಂಧನ ಇಲಾಖೆ ಮುಂದಾಗಿದೆ. ಇದಕ್ಕೆ ಪೂರಕವಾಗಿ ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ (ಮೆಸ್ಕಾಂ) ವ್ಯಾಪ್ತಿಯಲ್ಲಿ ಹೊಸದಾಗಿ 171 ಇವಿ ಚಾರ್ಜಿಂಗ್ ಕೇಂದ್ರಗಳು ಸ್ಥಾಪನೆಯಾಗಲಿವೆ. 


ಮೆಸ್ಕಾಂ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 17, ಉಡುಪಿ ಜಿಲ್ಲೆಯಲ್ಲಿ 12, ಶಿವಮೊಗ್ಗ ಜಿಲ್ಲೆಯಲ್ಲಿ 17 ಹಾಗೂ ಚಿಕ್ಕಮಗಳೂರಿನಲ್ಲಿ 11 ಸೇರಿದಂತೆ ಪ್ರಸ್ತುತ 57 ಇವಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಹೊಸದಾಗಿ 171 ಇವಿ ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಟೆಂಡರ್‌ ಪ್ರಕ್ರಿಯೆ ನಡೆದಿದೆ. ರಾಜ್ಯದಲ್ಲಿ ಪ್ರಸ್ತುತ ಒಟ್ಟು 5130 ಇವಿ ಚಾರ್ಜಿಂಗ್ ಕೇಂದ್ರಗಳಿದ್ದು, ರಾಜ್ಯ ಅಗ್ರ ಸ್ಥಾನದಲ್ಲಿದೆ. 

 ಈ ಯೋಜನೆಗಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿಯನ್ನು ನೋಡಲ್‌ ಏಜೆನ್ಸಿ ಆಗಿ ನೇಮಿಸಿ, ಯೋಜನೆಯ ಅನುಷ್ಠಾನದ ಹೊಣೆ ನೀಡಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹೊಸದಾಗಿ ಕೇಂದ್ರಗಳನ್ನು ಗುರುತಿಸಲಾಗಿದೆ. 

ರಾಜ್ಯದ 31 ಜಿಲ್ಲೆಗಳಲ್ಲಿ ಸರ್ಕಾರ- ಸಾರ್ವಜನಿಕ ಸಹಭಾಗಿತ್ವದಲ್ಲಿ (ಪಿಪಿಪಿ) ಮಾದರಿಯಲ್ಲಿ ಹೊಸತಾಗಿ 1190 ಇವಿ ಚಾರ್ಜಿಂಗ್ ಕೇಂದ್ರಗಳು, 2380 ಇವಿ ಚಾರ್ಜರ್ ಗಳನ್ನು ಸ್ಥಾಪಿಸಲಾಗುತ್ತಿದೆ. ಇವುಗಳಿಗೆ ಅವಶ್ಯವಿರುವ ಮೂಲ ಸೌಕರ್ಯಗಳನ್ನು ಇಂಧನ ಇಲಾಖೆ ವತಿಯಿಂದ ಮಾಡಲಾಗುತ್ತಿದೆ. 

ಮೆಸ್ಕಾಂ ವ್ಯಾಪ್ತಿಯಲ್ಲಿ 190 ಇವಿ ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದರಲ್ಲಿ ಪ್ರಸ್ತುತ ದ.ಕನ್ನಡದಲ್ಲಿ 79, ಉಡುಪಿಯಲ್ಲಿ 22, ಶಿವಮೊಗ್ಗದಲ್ಲಿ 50, ಚಿಕ್ಕಮಗಳೂರು ಜಿಲ್ಲೆಯಲ್ಲಿ 20 ಸೇರಿದಂತೆ ಒಟ್ಟು 171 ಕೇಂದ್ರಗಳನ್ನು ಗುರುತಿಸಲಾಗಿದೆ.

ನಾಲ್ಕು ಜಿಲ್ಲೆಗಳಲ್ಲಿ ಮಾದರಿಯಲ್ಲಿ ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಬೆಂಗಳೂರಿನ ಮೆಡಿಕಲ್ ಸಿಸ್ಟಮ್‌ ಗೆ ಎಲ್ ಒಐ ನೀಡಲಾಗಿದೆ. ಇದಕ್ಕೆ ಟೆಂಡ‌ರ್ ಕರೆಯಲಾಗಿದ್ದು ಉಡುಪಿಯ 20 ಕೇಂದ್ರಗಳನ್ನು ಹೊರತುಪಡಿಸಿ ಟೆಂಡರ್‌ ಪ್ರಕ್ರಿಯೆ ನಡೆದಿದೆ. 

ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳು ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಈಗಾಗಲೇ ಇರುವ ಇವಿ ಚಾರ್ಜಿಂಗ್ ಪಾಯಿಂಟ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ಮೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಹೆದ್ದಾರಿಗಳಲ್ಲಿ 80 ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಇದರಲ್ಲಿ 32 ಮೆಸ್ಕಾಂ ವ್ಯಾಪ್ತಿಯ ಸ್ಥಳದಲ್ಲಿ ಹಾಗೂ 48 ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಆವರಣಗಳಲ್ಲಿ ಸ್ಥಾಪನೆಯಾಗುತ್ತಿದೆ. ಈ ಮೂಲಕ ಇವಿ ವಾಹನಗಳ ಬಳಕೆಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಲು ರಾಜ್ಯ ಸರಕಾರ ಮುಂದಾಗಿದೆ‌.