HSRP ನಂಬರ್ ಪ್ಲೇಟ್ ಅಳವಡಿಕೆ ಡೆಡ್‌ಲೈನ್ ವಿಸ್ತರಣೆ| ಸೆಪ್ಟೆಂಬರ್‌ವರೆಗೆ ವಿಸ್ತರಿಸಲು ಹೈಕೋರ್ಟ್ ಅನುಮತಿ

ಬೆಂಗಳೂರು: ವಾಹನ ಸವಾರರಿಗೆ ಇದು ಗುಡ್ ನ್ಯೂಸ್. ಹೈ ಸೆಕ್ಯೂರಿಟಿ ರಿಜಿಸ್ಟೆçಷನ್ ಪ್ಲೇಟ್ ಅಳವಡಿಕೆಗೆ ನೀಡಿದ್ದ ಗಡುವು ಮುಗಿದು ಇನ್ನೇನು ದಂಡ ತೆರಬೇಕೆಂದು ಕಂಗಾಲಾಗಿದ್ದ ವಾಹನ ಸವಾರರಿಗೆ ಕರ್ನಾಟಕ ಹೈಕೋರ್ಟ್ ಗುಡ್‌ನ್ಯೂಸ್ ನೀಡಿದೆ. ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್‌ಪ್ಲೇಟ್ ಅಳವಡಿಸಲು ಆಗಸ್ಟ್ ಅಥವಾ ಸೆಪ್ಟೆಂಬರ್‌ವರೆಗೆ ಗಡುವು ವಿಸ್ತರಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ.

ಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ವಿಧಿಸಲಾಗಿರುವ ಗಡುವು ವಿಸ್ತರಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಬಿಎನ್‌ಡಿ ಎನರ್ಜಿ ಲಿಮಿಟೆಡ್ ಮತ್ತಿತರರು ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆಯನ್ನು ಜೂ.12ರಂದು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠ ನಡೆಸಿತು. ಹೈಕೋರ್ಟ್ನ ರಜಾಕಾಲೀನ ಪೀಠವು ಮೇ 21ರಂದು ಹೆಚ್‌ಎಸ್‌ಆರ್‌ಪಿ ಅಳವಡಿಸದಿರುವುದಕ್ಕೆ ಅರ್ಜಿದಾರರ ವಿರುದ್ಧ ಯಾವುದೇ ಕ್ರಮಕೈಗೊಳ್ಳಬಾರದು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಈಗ ರಾಜ್ಯ ಸರ್ಕಾರವು ಆಗಸ್ಟ್-ಸೆಪ್ಟೆಂಬರ್‌ವರೆಗೆ ಹೆಚ್‌ಎಸ್‌ಆರ್‌ಪಿ ಅಳವಡಿಕೆ ಗಡುವು ವಿಸ್ತರಿಸಲಾಗುವುದು ಎಂದು ತಿಳಿಸಿದೆ. ಹೀಗಾಗಿ, ಮೇ 21ರ ಆದೇಶದಲ್ಲಿ ಮಾರ್ಪಾಡು ಮಾಡಲಾಗಿದೆ” ಎಂದು ನ್ಯಾಯಾಲಯವು ಆದೇಶ ಮಾಡಿದೆ.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ವಿಕ್ರಮ್ ಹುಯಿಲಗೋಳ ಅವರು “ಸರ್ಕಾರವು ಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ವಿಧಿಸಿರುವ ಗಡುವನ್ನು ಆಗಸ್ಟ್ ಅಥವಾ ಸೆಪ್ಟೆಂಬರ್‌ವರೆಗೆ ವಿಸ್ತರಿಸಲು ನಿರ್ಧರಿಸಿದೆ. ಆದರೆ, ರಜಾಕಾಲೀನ ಪೀಠವು ಮೇ 21ರಂದು ಕ್ರಮಕೈಗೊಳ್ಳಬಾರದು ಎಂದು ಆದೇಶಿಸಿದೆ. ಹೀಗಾಗಿ, ಗಡುವು ವಿಸ್ತರಿಸಿ ಅಧಿಸೂಚನೆ ಹೊರಡಿಸಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಆದ್ದರಿಂದ, ಮೇ 21ರ ಆದೇಶದಲ್ಲಿ ಮಾರ್ಪಾಡು ಮಾಡಬೇಕು. ಪೀಠ ಅನುಮತಿಸಿದರೆ ಒಂದು ವಾರದಲ್ಲಿ ಗಡುವು ವಿಸ್ತರಿಸಿ ಅಧಿಸೂಚನೆ ಹೊರಡಿಸಲಾಗುವುದು ಎಂದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಲಯವು ವಿಚಾರಣೆಯನ್ನು ಜುಲೈ 4ಕ್ಕೆ ಮುಂದೂಡಿದೆ