ರೇಣುಕಾಸ್ವಾಮಿ Murder Case: ನಟ ದರ್ಶನ್ & ಗ್ಯಾಂಗ್ ಗೆ ನ್ಯಾಯಾಂಗ ಬಂಧನ| ಪರಪ್ಪನ ಅಗ್ರಹಾರಕ್ಕೆ ಶಿಫ್ಟ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ತೂಗುದೀಪ್ ಮತ್ತು ಗ್ಯಾಂಗ್ ಪೊಲೀಸ್ ಕಸ್ಟಡಿ ಅವಧಿ ಮುಗಿದಿದೆ. ಇದೀಗ ನಟ ದರ್ಶನ್ ಸಹಿತ ನಾಲ್ವರು ಆರೋಪಿಗಳನ್ನು 24ನೇ ಎಸಿಎಂಎಂ ಕೋರ್ಟ್ ಶನಿವಾರ ಜುಲೈ 4 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.


ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರ ಆರೋಪಿಗಳಾದ ವಿನಯ್
, ಪ್ರದೋಷ್, ಧನರಾಜ್ ಅವರ ಎರಡು ದಿನದ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ ಇಂದು ಅವರನ್ನು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್​ಗೆ ಹಾಜರುಪಡಿಸಲಾಯಿತು. ಆರೋಪಿಗಳ ವಿಚಾರಣೆ ನಡೆಸಿದ ಕೋರ್ಟ್, ಪೊಲೀಸರು ಮತ್ತೆ ಕಸ್ಟಡಿಗೆ ಕೇಳಲಿಲ್ಲವಾದ್ದರಿಂದ ದರ್ಶನ್ ಹಾಗೂ ಇತರೆ ಮೂವರು ಆರೋಪಿಗಳಿಗೆ 13 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅವರು ಆರೋಪಿಗಳನ್ನು ಪ್ರತ್ಯೇಕವಾಗಿ ಮತ್ತು ಕರ್ನಾಟಕದಾದ್ಯಂತ ವಿವಿಧ ಜೈಲುಗಳಲ್ಲಿ ಇರಿಸಲು ನಿರ್ದೇಶಿಸುವಂತೆ ನ್ಯಾಯಾಲಯಕ್ಕ ಮನವಿ ಮಾಡಿದರು. ಇದನ್ನು ದರ್ಶನ್ ಅವರ ವಕೀಲರು ವಿರೋಧಿಸಿದರು. ದರ್ಶನ್ ಮತ್ತು ಅವರ ಸಹಚರರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು.

ರೇಣುಕಾ ಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 11 ರಂದು ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳನ್ನು ಬಂಧಿಸಲಾಗಿತ್ತು. ಜೂನ್ 11 ರಿಂದ ನಟ ದರ್ಶನ್ ಪೊಲೀಸ್ ಕಸ್ಟಡಿಯಲ್ಲಿದ್ದರು. ಎರಡು ದಿನಗಳ ಹಿಂದೆ ನಟನ ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ 13 ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಈ ಪ್ರಕರಣ ಸಂಬಂಧ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ಈಗಾಗಲೇ ಸಾಕಷ್ಟು ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ. ಅನೇಕ ಸ್ಥಳಗಳಿಗೆ ತೆರಳಿ ಮಹಜರು ಮಾಡಲಾಗಿದೆ. ಪವಿತ್ರಾ ಗೌಡ ಮನೆಯಲ್ಲೂ ಮಹಜರು ಮಾಡಲಾಗಿತ್ತು. ತನಿಖೆ ಇನ್ನೂ ಪ್ರಗತಿಯಲ್ಲಿದೆ.