ಬೆಂಗಳೂರು: ಮುಡಾ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರಾಜ್ಯಪಾಲರು ನೀಡಿರುವ ಶೋಕಾಸ್ ನೋಟಿಸ್ ಹಿಂಪಡೆಯುವಂತೆ ಒತ್ತಾಯಿಸಿ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯವನ್ನು ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೈರಲ್ಲಿ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ.
ಮುಡಾ ವಿಚಾರವಾಗಿ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಿರುವ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘವಾಗಿ ಚರ್ಚೆ ಮಾಡಲಾಯಿತು. ಅಲ್ಲದೆ, ನೋಟಿಸ್ ಬಗ್ಗೆ ತೀವ್ರ ಆಕ್ಷೇಪವನ್ನು ವ್ಯಕ್ತವಾಯಿತು. ಇದರ ಜೊತೆಗೆ, ಮುಡಾ ಸಂಬಂಧ ಕಾನೂನು ಹೋರಾಟಕ್ಕೂ ತೀರ್ಮಾನ ಮಾಡಲಾಗಿದೆ.
ರಾಜ್ಯಪಾಲರು ಜುಲೈ 26ಕ್ಕೆ ಶೋಕಾಸ್ ನೋಟಿಸ್ ನೀಡಿದ್ದರು. ಟಿ.ಜೆ.ಅಬ್ರಾಹಂ ಅರ್ಜಿಯನ್ನು ತಿರಸ್ಕರಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ.
''ಕಾನೂನಿನ ಚೌಕಟ್ಟಿನಲ್ಲೇ ನಾವು ಹೋಗಿದ್ದೇವೆ. ಈ ಸಂಬಂಧ ಹಲವು ತೀರ್ಪುಗಳಿವೆ. ಅವರು ಖಂಡಿತವಾಗಿ ಅರ್ಜಿ ತಿರಸ್ಕರಿಸಿ, ಶೋಕಾಸ್ ನೋಟಿಸ್ ವಾಪಸ್ ಪಡೆಯುತ್ತಾರೆ ಎಂಬ ವಿಶ್ವಾಸ ಇದೆ. ಕಾನೂನು ಪ್ರಕಾರ ತೀರ್ಮಾನ ಕೈಗೊಳ್ಳುತ್ತಾರೆ ಎಂಬ ನಂಬಿಕೆ ಇದೆ'' ಎಂದು ಸಂಪುಟ ಸಭೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದರು.

Social Icons