ಲಖನೌ: ಉತ್ತರಪ್ರದೇಶದ ಬಾರಾಬಂಕಿಯಲ್ಲಿ ಗುರುವಾರ ಮಧ್ಯರಾತ್ರಿ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ ಪುಟ್ಟಮಗು ಸೇರಿದಂತೆ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಇರ್ಫಾನ್, ವಹಿದುನ್ ನಿಶಾ, ಅಜೀಜ್ ಅಹ್ಮದ್, ತಾಹಿರಾ ಬಾನೋ ಮತ್ತು ಸಬೀನ್ ಎಂದು ಗುರುತಿಸಲಾಗಿದೆ, ಎಲ್ಲರೂ ಬಾರಾಬಂಕಿ ಜಿಲ್ಲೆಯ ಒಂದೇ ಕುಟುಂಬದವರು. ಕಾರು ಚಾಲಕ ವಿವೇಕ್ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಮೆಹಮೂದಾಬಾದ್ ರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು, ಲಖನೌ ಕಡೆಗೆ ವೇಗವಾಗಿ ತೆರಳುತ್ತಿದ್ದ ಕಾರೊಂದು ಮೊದಲಿಗೆ ಆಟೋಗೆ ಡಿಕ್ಕಿ ಹೊಡೆದಿದೆ. ಬಳಿಕ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಎರಡನೇ ಕಾರು ಸಮೀಪದ ಹೊಂಡಕ್ಕೆ ಹಾರಿದೆ.
ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರು ಗಾಯಾಳುಗಳನ್ನು ರಕ್ಷಣೆ ಮಾಡಲು ಮುಂದಾದರು. ಮೂವರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಚಿಕಿತ್ಸೆ ವೇಳೆ ಕೊನೆಯುಸಿರೆಳೆದಿದ್ದಾರೆ. ಮೃತರೆಲ್ಲರೂ ಸಂಬಂಧಿಕರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಆಟೋದಲ್ಲಿ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Social Icons